July 13, 2025

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ

Judi News –
ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮಕ್ಕೆ ಶಿಫಾರಸ್ಸು – ಶೇಖರಗೌಡ ರಾಮತ್ನಾಳ
—-
ಕೊಪ್ಪಳ ಏಪ್ರಿಲ್ 03: ಬಾಲಕಿಯ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಮೃತ ವಿದ್ಯಾರ್ಥಿನಿಯ ಮನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಬುಧವಾರ ಭೇಟಿ ನೀಡಿ, ಪಾಲಕರಿಗೆ ಸಾಂತ್ವನ ಹೇಳಿದರು.
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇತ್ತೀಚೆಗೆ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಅದರಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದರು. ಮಗುವಿನ ಪೋಷಕರು ಮಗಳಿಗೆ 8ನೇ ತರಗತಿಯಲ್ಲಿ ಕಡಿಮೆ ಅಂಕ ಪಡೆದುಕೊಂಡಿದ್ದು ಅದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿಸಿರುತ್ತಾರೆ.
ಈ ಮಗುವು ವ್ಯಾಸಂಗ ಮಾಡುತ್ತಿದ್ದ ಎಸ್.ಎಫ್.ಎಸ್. ಶಾಲೆಗೆ ಭೇಟಿ ನೀಡಿ, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರನ್ನು ವಿಚಾರಿಸಲಾಗಿದೆ. ಈ ವೇಳೆ ಮಗುವು ಪರೀಕ್ಷೆಯಲ್ಲಿ ನಕಲು ಮಾಡುವುದು ಕಂಡುಬAದಿದ್ದು, ಈ ಬಗ್ಗೆ ಮಗುವಿನ ಪಾಲಕರನ್ನು ಕರೆಯಿಸಿ ಈ ರೀತಿ ಪುನರಾವರ್ತನೆಯಾಗದಂತೆ ನಡೆದುಕೊಳ್ಳಲು ತಿಳಿವಳಿಕೆ ನೀಡಲಾಗಿರುತ್ತದೆ ಎಂದು ವರ್ಗದ ಶಿಕ್ಷಕರು ಹೇಳಿದರು.
ಆದರೆ, ಈ ಬಗ್ಗೆ ವಿಚಾರಿಸಿದಾಗ ಮಗು ಆತ್ಮಹತ್ಯೆ ಮಾಡಿಕೊಳ್ಳವಷ್ಟು ಅವಳಿಗೆ ಉತ್ತೇಜನ ಹಾಗೂ ಅವಹೇಳನ ಮಾಡಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೊಟಕ್ಕೆ ಕಂಡುಬರುತ್ತಿದ್ದು, ಈ ಕುರಿತು ಹಾಜರಿದ್ದ ಪೊಲೀಸ್ ನಿರೀಕ್ಷಕರಿಗೆ ಸೂಕ್ತ ತನಿಖೆ ನಡೆಸಿ ಸಂಬಂಧಿಸಿದ 8ನೇ ವರ್ಗದ ಶಿಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಸಂಸ್ಥೆ ಹಾಗೂ ಆಡಳಿತ ಮಂಡಳಿಯ ವಿರುದ್ಧ ಕ್ರಮ ಜರುಗಿಸಲು ಶಿಫಾರಸ್ಸು ಮಾಡಿದರು ಹಾಗೂ ಈ ಕುರಿತು ಆಯೋಗಕ್ಕೆ ವರದಿ ನೀಡುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದು ರಾಜ್ಯ ಪಠ್ಯಕ್ರಮದ ಶಾಲೆಯಾಗಿರುವುದರಿಂದ ಶಿಕ್ಷಣ ಇಲಾಖೆಯ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕಾಗಿದ್ದು, ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲು ಏಪ್ರಿಲ್-9ರ ವರೆಗೆ ಕಾಲಾವಕಾಶ ಇದ್ದರೂ ಸಹ ಮಾರ್ಚ್-26ನೇ ತಾರೀಖಿನಂದು ಫಲಿತಾಂಶ ಪ್ರಕಟಿಸಲಾಗಿದೆ. ಅಷ್ಟೇ ಅಲ್ಲದೇ ಶಿಕ್ಷಣ ಇಲಾಖೆಯ ನಿಯಮಾವಳಿಗಳಂತೆ ಕಾರ್ಯನಿರ್ವಹಿಸದೇ ಇರುವ ಬಗ್ಗೆ ಸಂಸ್ಥೆ, ಆಡಳಿತ ಮಂಡಳಿ ವಿರುದ್ಧ ಕ್ರಮ ಜರುಗಿಸುವಂತೆ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು ಹಾಗೂ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.